Source : The New Indian Express
ಕೊಯಮತ್ತೂರು: ರಕ್ಷಣಾ ಪಡೆಗಳ ಮುಖ್ಯಸ್ಥ(ಸಿಡಿಎಸ್) ಜನರಲ್ ಬಿಪಿನ್ ರಾವತ್ ಹಾಗೂ ಹಿರಿಯ ರಕ್ಷಣಾ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಬಳಿ ಪತನಗೊಂಡಿದ್ದು, ಘಟನೆಯಲ್ಲಿ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್ ಅವರು ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ.
ಹೆಲಿಕಾಪ್ಟರ್ ದುರಂತದಲ್ಲಿ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್ ಹಾಗೂ ಇತರ 11 ಸಿಬ್ಬಂದಿ ಮೃತಪಟ್ಟಿದ್ದಾರೆ ಎಂದು ಭಾರತೀಯ ವಾಯುಪಡೆ ಟ್ವೀಟ್ ಮಾಡಿದೆ.
ಇದನ್ನೂ ನೋಡಿ: Photos: ತಮಿಳುನಾಡು: ಸಿಡಿಎಸ್ ಬಿಪಿನ್ ರಾವತ್, ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನ
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಿಪಿನ್ ರಾವತ್ ಅವರನ್ನು ವೆಲ್ಲಿಂಗ್ಟನ್ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಸೇನಾ ಹೆಲಿಕಾಪ್ಟರ್ ನಲ್ಲಿ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರ್ಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ ಮತ್ತು ಹವಾಲ್ದಾರ್ ಸತ್ಪಾಲ್ ಸೇರಿದಂತೆ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಹೆಲಿಕಾಪ್ಟರ್ ಕೂನೂರಿನಿಂದ ಕೊಯಮತ್ತೂರು ಸೇನಾ ಕಾರ್ಯಕ್ರಮಕ್ಕೆ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಮತ್ತು ಇತರ 12 ಜನರನ್ನು(ಸೇನಾಧಿಕಾರಿಗಳೂ ಒಳಗೊಂಡಂತೆ) ಹೊತ್ತು ತೆರಳುತ್ತಿತ್ತು.
ತನಿಖೆಗೆ ಆದೇಶ: ತಮಿಳು ನಾಡಿನ ಕೂನೂರು ಬಳಿ ಎಂಐ-17ವಿ5 ಹೆಲಿಕಾಪ್ಟರ್( Mi-17V5 helicopter) ಪತನಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಭಾರತೀಯ ವಾಯುಪಡೆ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್, ಅವರ ಕುಟುಂಬ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ.
With deep regret, it has now been ascertained that Gen Bipin Rawat, Mrs Madhulika Rawat and 11 other persons on board have died in the unfortunate accident.
— Indian Air Force (@IAF_MCC) December 8, 2021