
ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಯಾಣಿಸಬೇಕಿದ್ದ ವಿಮಾನ ಟೇಕ್ ಆಫ್ ಆಗಿಲ್ಲ. ತಾಂತ್ರಿಕ ಸಮಸ್ಯೆಗಳ ಕಾರಣದಿಂದಾಗಿ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನ ಉಳಿದುಕೊಂಡಿದೆ.
ಇದನ್ನು ಓದಿ: ಕೋವಿಡ್ ನಿಂದ ಅನಾಥರಾದ ಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಸರ್ಕಾರದ ಜವಾಬ್ದಾರಿ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿಯಲ್ಲಿ ನಡೆಯುವ ಬಿಜೆಪಿ ಕಾರ್ಯಕಾರಿಣಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೆರಳಬೇಕಾಗಿತ್ತು. ಸಿಎಂ ಅವರೊಂದಿಗೆ ಕೆಲ ಸಚಿವರು ಹುಬ್ಬಳ್ಳಿಗೆ ಪ್ರಯಾಣ ಮಾಡಬೇಕಿತ್ತು. ಆದರೆ, ವಿಶೇಷ ವಿಮಾನದಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡುಬಂದಿದ್ದರಿಂದ ವಿಮಾನ ಟೇಕಾಫ್ ಆಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಶೇಷ ವಿಮಾನ ಕೈಕೊಟ್ಟಿದ್ದರಿಂದ ಬಸವರಾಜ ಬೊಮ್ಮಾಯಿ, ಕಂದಾಯ ಸಚಿವ ಆರ್.ಅಶೋಕ್, ಎಸ್.ಟಿ.ಸೋಮಶೇಖರ್ ಸದ್ಯ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲೇ ಸಮಯ ಕಳೆಯುತ್ತಿದ್ದಾರೆ.
ವಿಮಾನ ನಿಲ್ದಾಣದ ಅಧಿಕಾರಿಗಳು ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸುವ ಸಂಬಂಧ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ.