Karnataka news paper

ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಹೆಚ್ಚಳ: 8 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ



ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳ ಹೆಚ್ಚಳ: 8 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾತ್ರಿ ಕರ್ಫ್ಯೂ ಜಾರಿ

ಕರ್ಫ್ಯೂ ಕರ್ತವ್ಯದಲ್ಲಿ ತೊಡಗಿರುವ ಪೊಲೀಸರ ಚಿತ್ರ

The New Indian Express

ನವದೆಹಲಿ: ದೇಶದಲ್ಲಿ ಕೊರೋನಾ ರೂಪಾಂತರಿ ಓಮಿಕ್ರಾನ್ ಪ್ರಕರಣಗಳ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ 8 ರಾಜ್ಯಗಳು, ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾತ್ರಿ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ. 

ಇಲ್ಲಿಯವರೆಗೂ  ಕರ್ನಾಟಕ, ದೆಹಲಿ, ಉತ್ತರ ಪ್ರದೇಶ, ಮಧ್ಯ ಪ್ರದೇಶ, ಅಸ್ಸಾಂ, ಹರಿಯಾಣ, ಕೇರಳ, ಉತ್ತರಾಖಂಡ್ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ, ದಾದ್ರಾ ಮತ್ತು ನಗರ್ ಹವೇಲಿ, ದಾಮನ್ ಮತ್ತು ದಿಯೂ ನಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. 

ಕರ್ನಾಟಕದಲ್ಲಿ ಓಮಿಕ್ರಾನ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಮಂಗಳವಾರ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಮುಂದಿನ ಹತ್ತು ದಿನಗಳ ಕಾಲ ಕರ್ಫ್ಯೂ ಜಾರಿಗೆ ಬಂದಿದ್ದು, ಅನವಶ್ಯಕವಾಗಿ ಓಡಾಡುವವರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ಗಡಿ ಪ್ರದೇಶಗಳಲ್ಲಿ ಪೊಲೀಸರು ವಾಹನಗಳ ಮೇಲೆ ನಿಗಾ ವಹಿಸಿದ್ದು, ತಪಾಸಣೆ ಮಾಡುತ್ತಿದ್ದಾರೆ.

ಬೆಂಗಳೂರಿನ ವಿವಿಧೆಡೆ ನಾಕಾಬಂಧಿ ಹಾಕಿದ ಪೊಲೀಸರು ವಾಹನಗಳ ತಪಾಸಣೆ ನಡೆಸಿದರು. ಪೊಲೀಸರು ವಾಹನ ತಪಾಸಣೆ ನಡೆಸಿದ್ದರಿಂದ ಹಲವೆಡೆ ದಟ್ಟಣೆ ಕಂಡುಬಂದಿತು. ಎಂಜಿ ರಸ್ತೆ, ಮೆಜೆಸ್ಟಿಕ್, ಕೆ.ಆರ್, ಮಾರುಕಟ್ಟೆ. ಶಿವಾಜಿನಗರ ಮತ್ತಿತರ ಕಡೆಗಳಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಇದನ್ನೂ ಓದಿ: ಆರೋಗ್ಯ ಸಮಸ್ಯೆ ಇರುವ 60 ವರ್ಷ ಮೇಲ್ಪಟ್ಟವರು ಬೂಸ್ಟರ್ ಡೋಸ್ ಪಡೆಯಲು ಡಾಕ್ಟರ್ ಸರ್ಟಿಫಿಕೇಟ್ ಬೇಕಿಲ್ಲ: ಕೇಂದ್ರ ಸರ್ಕಾರ

ದೆಹಲಿಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ ಹಳದಿ ಆಲರ್ಟ್ ಘೋಷಿಸಲಾಗಿದೆ. ಅಲ್ಲದೇ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ ಅಡಿ ಕೆಲವೊಂದು ನಿರ್ಬಂಧಗಳನ್ನು ಹೇರಲಾಗಿದೆ. ಮುಂಬೈಯಲ್ಲಿ ಮಂಗಳವಾರ ಶೇಕಡಾ 70 ರಷ್ಟು ಓಮಿಕ್ರಾನ್ ರೂಪಾಂತರಿ ಪ್ರಕರಣಗಳು ದಾಖಲಾಗಿದ್ದು, ಈ ತಿಂಗಳಲ್ಲಿ ಇದೇ ಮೊದಲ ಬಾರಿಗೆ 1 ಸಾವಿರ ಕೋವಿಡ್ ಪ್ರಕರಣ ದಾಖಲಾಗಿದೆ. ಈ ಮಧ್ಯೆ 338 ಜನರು ಗುಣಮುಖರಾಗಿದ್ದಾರೆ. 

ಕೋವಿಡ್-19 ಮತ್ತು ಅದರ ಅಪಾಯಕಾರಿ ರೂಪಾಂತರಿ ಓಮಿಕ್ರಾನ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜನದಟ್ಟಣೆ ಕಡೆಗಳಲ್ಲಿ ಕಠಿಣ ನಿರ್ಬಂಧ ವಿಧಿಸುವಂತೆ ಮತ್ತು ಕಂಟೈನ್ ಮೆಂಟ್ ವಲಯಗಳನ್ನು ಸೃಷ್ಟಿಸುವಂತೆ ಎಲ್ಲಾ ಜಿಲ್ಲಾ ಮ್ಯಾಜಿಸ್ಟ್ರೇಟರ್ ಗಳಿಗೆ ಉತ್ತರಾಖಂಡ ಮುಖ್ಯ ಕಾರ್ಯದರ್ಶಿ ಡಾ.ಎಸ್. ಎಸ್. ಸಂಧು ಮಂಗಳವಾರ ಸೂಚಿಸಿದ್ದಾರೆ.




    Read more