
ಸಂಗ್ರಹ ಚಿತ್ರ
ಬೆಂಗಳೂರು: ನಗರದ 8 ವಲಯ ವ್ಯಾಪ್ತಿಯಲ್ಲಿ ಜ.3ರಿಂದ 15-18 ವರ್ಷ ವಯಸ್ಸಿನವರಿಗೆ ಲಸಿಕೆ ನೀಡಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಸೂಚಿಸಿದ್ದಾರೆ.
ಕೋವಿಡ್ ನಿಯಂತ್ರಣ ಕುರಿತ ಪರಿಶೀಲನಾ ಸಭೆಯಲ್ಲಿ ಮಾತನಾಡಿರುವ ಅವರು, ಖಾಸಗಿ ಮತ್ತು ಸರ್ಕಾರಿ ಶಾಲಾ-ಕಾಲೇಜುಗಳ ಪಟ್ಟಿಯನ್ನು ಸಿದ್ಧಪಡಿಸಲು ಮತ್ತು ಎಲ್ಲಾ ಸಂಸ್ಥೆಗಳಲ್ಲಿ ಲಸಿಕೆ ಸಿಬ್ಬಂದಿಯನ್ನು ನಿಯೋಜಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಸರ್ಕಾರೇತರ ಸಂಸ್ಥೆಗಳ ಸಹಕಾರ ಪಡೆದು ಶಾಲೆಯಿಂದ ಹೊರಗುಳಿದ, ಕೊಳಗೈರಿ ಮತ್ತು ಕೈಗಾರಿಕಾ ಪ್ರದೇಶಗಳಲ್ಲಿರುವ ಮಕ್ಕಳ ಗುರ್ತಿಸಬೇಕು. ಜ.10ರಿಂದ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಲು ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದ್ದಾರೆ.
ಇದನ್ನೂ ಓದಿ: 15-18 ವರ್ಷ ವಯಸ್ಸಿನವರಿಗೆ ಶಾಲಾ-ಕಾಲೇಜುಗಳಲ್ಲಿ ಕೋವಿಡ್ ಲಸಿಕೆ ನೀಡಿಕೆ: ಸಿಎಂ ಬೊಮ್ಮಾಯಿ
ಬಿಬಿಎಂಪಿ ಆರೋಗ್ಯ ವಿಶೇಷ ಆಯುಕ್ತ ಡಾ.ಕೆ.ವಿ.ತ್ರಿಲೋಕ್ ಚಂದ್ರ ಮಾತನಾಡಿ, 15ರಿಂದ 18 ವರ್ಷದೊಳಗಿನ 5 ಲಕ್ಷ ಮಕ್ಕಳಿದ್ದು, ಅವರಿಗೆ ಲಸಿಕೆ ಹಾಕಬೇಕಿದೆ. ಸಂಸ್ಥೆಗಳು, ಫಲಾನುಭವಿಗಳು ಮತ್ತು ಲಸಿಕೆ ಅಭಿಯಾನ ನಡೆಯುವ ಪ್ರದೇಶಗಳನ್ನು ಪಟ್ಟಿ ಮಾಡಲು ವಲಯವಾರು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಬೇಕು ಎಂದು ಹೇಳಿದರು.