Karnataka news paper

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪ: ಸಂಸದ ಕಟೀಲ್ ವಿರುದ್ಧದ ಪ್ರಕರಣ ರದ್ದು


ಬೆಂಗಳೂರು: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕದ್ರಿ ಪೂರ್ವ ಠಾಣೆ ಪೋಲಿಸರು ದಾಖಲಿಸಿದ್ದ ಎಫ್ಐ‌ಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. 

ಈ ಕುರಿತಂತೆ ನಳಿನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ, ಮಂಗಳೂರು 2ನೇ ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆಯನ್ನು ರದ್ದುಪಡಿಸಿತು.

ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ಎಚ್‌. ಪವನಚಂದ್ರ ಶೆಟ್ಟಿ, ‘ಸಂಸದರು ಜನರನ್ನು ಪ್ರಚೋದಿಸುವ ಅಥವಾ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಉದ್ದೇಶ ಹೊಂದಿರಲಿಲ್ಲ. ಅವರು ತಮ್ಮ ಕರ್ತವ್ಯ ನಿಭಾಯಿಸಿದ್ದಾರೆ. ಸಂವಿಧಾನದ 105ನೇ ವಿಧಿಯ ಅನುಸಾರ ಅಧಿಕಾರಿಗಳು ತಪ್ಪು ಮಾಡುತ್ತಿದ್ದಾರೆ ಎಂದು ಗೊತ್ತಾದಾಗ ಜನಪ್ರತಿನಿಧಿಗಳು ಮಧ್ಯಪ್ರವೇಶಿಸುವ ಅಧಿಕಾರ ಹೊಂದಿದ್ದಾರೆ. ಅಂತೆಯೇ, ಈ ಪ್ರಕರಣದಲ್ಲಿ ಆರೋಪ ರುಜುವಾತುಪಡಿಸುವಂತಹ ಅಂಶಗಳೇ ಇಲ್ಲ. ಆದ್ದರಿಂದ, ಪ್ರಕರಣ ರದ್ದುಪಡಿಸಬೇಕು’ ಎಂದು ಕೋರಿದ್ದರು.

ಪ್ರಕರಣವೇನು?: ‘ರಾಜ್ಯದಲ್ಲಿ ಕೋಮುಗಲಭೆ ನಡೆಯುತ್ತಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ 2017ರ ಸೆಪ್ಟೆಂಬರ್ 7ರಂದು ಬೆಂಗಳೂರಿನಿಂದ ಮಂಗಳೂರಿಗೆ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿತ್ತು.  ಈ ಹಿನ್ನೆಲೆಯಲ್ಲಿ ಅಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಲು ಮುಂದಾಗಿದ್ದ ಬಿಜೆಪಿ ಕಾರ್ಯಕರ್ತರನ್ನು ಮಂಗಳೂರು ಪೂರ್ವ ಠಾಣಾ ಇನ್ಸ್‌ಪೆಕ್ಟರ್ ಬಂಧಿಸಿದ್ದರು.

ಈ ಕುರಿತು ಮಾಹಿತಿ ಪಡೆದಿದ್ದ ನಳೀನ್ ಕುಮಾರ್ ಕಟೀಲ್, ತಕ್ಷಣವೇ ಠಾಣೆಗೆ ತೆರಳಿ ಕಾರ್ಯಕರ್ತರ ಬಂಧನದ ಕುರಿತ ಡೈರಿಯನ್ನು ತೋರಿಸುವಂತೆ ಇನ್‌ಸ್ಪೆಕ್ಟರ್ ಅವರನ್ನು ಕೇಳಿದ್ದರು. ಇದಕ್ಕೆ ಪ್ರತಿಯಾಗಿ ಪೊಲೀಸ್ ಇನ್‌ಸ್ಪೆಕ್ಟರ್ ಮಾರುತಿ ಜಿ. ನಾಯಕ್, ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿದ ಆರೋಪದಡಿ ಕಟೀಲ್ ವಿರುದ್ಧ ಮಂಗಳೂರು ಪೂರ್ವ ಪೊಲೀಸ್ ಠಾಣಾಧಿಕಾರಿಗೆ ದೂರು ನೀಡಿದ್ದರು. 



Read more from source

[wpas_products keywords=”deal of the day sale today kitchen”]