ಬೆಂಗಳೂರು: ಕೋವಿಡ್‌ನಿಂದ ಎದುರಾದ ಸವಾಲು ಮತ್ತು ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸಿ, ರಾಜ್ಯವನ್ನು ಅಭಿವೃದ್ಧಿಯತ್ತ ಮುನ್ನಡೆಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಶ್ಲಾಘಿಸಿದರು.
ವಿಧಾನಸಭೆಯ ಸಭಾಂಗಣದಲ್ಲಿ ಸೋಮವಾರ ನಡೆದ ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ‘ಕೋವಿಡ್ ನಿರ್ವಹಣೆ ವಿಚಾರದಲ್ಲಿ ಕರ್ನಾಟಕ ಸರ್ಕಾರವು ಅಗತ್ಯಕ್ಕೆ ಅನುಸಾರವಾಗಿ ಕೆಲಸ ಮಾಡಿದೆ. ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳಿಂದಾಗಿ ರಾಜ್ಯದಲ್ಲಿ ಸಾವಿನ ಸಂಖ್ಯೆಯನ್ನು ಕಡಿಮೆ ಮಾಡಲು ಸಾಧ್ಯವಾಗಿದೆ’ ಎಂದರು.
ರಾಜ್ಯದಲ್ಲಿ 9.33 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಶೇಕಡ 100ರಷ್ಟು ಜನರಿಗೆ ಮೊದಲ ಡೋಸ್ ಮತ್ತು ಶೇ 85ರಷ್ಟು ಜನರಿಗೆ ಎರಡನೇ ಡೋಸ್ ನೀಡಲಾಗಿದೆ. ಆರು ಕೋಟಿ ಕೋವಿಡ್ ಪರೀಕ್ಷೆ ನಡೆಸಿದ್ದು, ಈ ವಿಚಾರದಲ್ಲಿ ಕರ್ನಾಟಕವು ದೇಶದ ಮುಂಚೂಣಿ ರಾಜ್ಯಗಳಲ್ಲಿ ಒಂದಾಗಿದೆ ಎಂದು ಹೇಳಿದರು.
ಕೋವಿಡ್ ಚಿಕಿತ್ಸೆಗಾಗಿ 55,256 ಎಚ್ ಡಿಯು ಹಾಸಿಗೆಗಳು, 7,216 ಐಸಿಯು ಹಾಸಿಗೆಗಳು, 6,123 ಐಸಿಯು- ವೆಂಟಿಲೇಟರ್ ಬೆಡ್ ಸೇರಿದಂತೆ 1.95 ಲಕ್ಷ ಹಾಸಿಗೆಗಳನ್ನು ಚಿಕಿತ್ಸೆಗಾಗಿ ಸಜ್ಜುಗೊಳಿಸಲಾಗಿದೆ. 1,200 ಟನ್ ಆಮ್ಲಜನಕ ಉತ್ಪಾದಿಸುವ ಸಾಮರ್ಥ್ಯ ವೃದ್ಧಿಸಲಾಗಿದೆ ಎಂದರು.
ನಲ್ಲಿ ಮೂಲಕ ಕುಡಿಯುವ ನೀರು ಪೂರೈಸುವ ಯೋಜನೆ ಹಲವು ಗ್ರಾಮ ಪಂಚಾಯಿತಿಗಳಲ್ಲಿ ಚಾಲ್ತಿಯಲ್ಲಿದೆ. 2022-23ರಲ್ಲಿ 27.14 ಲಕ್ಷ ಮತ್ತು 2023- 24ರಲ್ಲಿ 17.45 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ಕಲ್ಪಿಸಲಾಗುವುದು. 5,965 ಗ್ರಾಮ ಪಂಚಾಯಿತಿಗಳ ಪೈಕಿ 5,571 ಗ್ರಾಮ ಪಂಚಾಯಿತಿಗಳಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯಪಾಲರು ಹೇಳಿದರು.
ಪ್ರವಾಹದಿಂದ ಹಾನಿಯಾದ ಪ್ರಕರಣಗಲ್ಲಿ 85,862 ಕುಟುಂಬಗಳಿಗೆ ₹ 85.86 ಕೋಟಿ ಪರಿಹಾರ ನೀಡಲಾಗಿದೆ. ಹಾನಿಗೀಡಾದ ಮನೆಗಳ ಪುನರ್ ನಿರ್ಮಾಣಕ್ಕೆ ₹ 400.52 ಕೋಟಿ ನೆರವು ಒದಗಿಸಲಾಗಿದೆ ಎಂದರು.
ಮುಖ್ಯಮಂತ್ರಿ ರೈತ ವಿದ್ಯಾರ್ಥಿ ನಿಧಿ ಯೋಜನೆ ಅಡಿಯಲ್ಲಿ 5.2 ಲಕ್ಷ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ₹ 126 ಕೋಟಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ರಾಜ್ಯವು ಹಲವು ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದು, ಅಭಿವೃದ್ಧಿಯಲ್ಲಿ ವೇಗವಾಗಿ ಮುನ್ನಡೆಯುತ್ತಿದೆ ಎಂದು ಗೆಹಲೋತ್ ಪ್ರಶಂಸಿದರು.
Read more from source
[wpas_products keywords=”deal of the day sale today kitchen”]