ANI
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.
ಶೋಪಿಯಾನ್ ಜಿಲ್ಲೆಯ ಚೌಗಾಮ್ ಎಂಬ ಪ್ರದೇಶದಜಲ್ಲಿ ಉಗ್ರರು ಅಡಗಿ ಕುಳಿತಿರುವ ಮಾಹಿತಿ ತಿಳಿದುಬಂದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿದ್ದವು. ಈ ವೇಳೆ ಉಗ್ರರು ಸೇನಾಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ಉಗ್ರರು ಗುಂಡಿನ ದಾಳಿ ನಡೆಸಿದ ಹಿನ್ನೆಲೆಯಲ್ಲಿ ಸ್ಥಳವನ್ನು ಸುತ್ತುವರೆದ ಭದ್ರತಾಪಡೆಗಳು ಎನ್ಕೌಂಟರ್ ನಡೆಸಲು ಆರಂಭಿಸಿದ್ದು, ಇದೀಗ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.
ಹತ್ಯೆಯಾದ ಇಬ್ಬರು ಉಗ್ರರು ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆಂದು ತಿಳಿದುಬಂದಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಿದ್ದು, ಸ್ಥಳದಲ್ಲಿ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ 24 ಗಂಟೆಗಳಲ್ಲಿ ದಕ್ಷಿಣ ಕಾಶ್ಮೀರದಲ್ಲಿ ನಡೆದ ಎರಡನೇ ಶೋಧ ಕಾರ್ಯಾಚರಣೆ ಇದಾಗಿದೆ. ಶುಕ್ರವಾರ ಕೂಡ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿರುವ ಅರ್ವಾನಿ ಪ್ರದೇಶದ ಮುಮನ್ಹಾಲ್ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಈ ವೇಳೆ ಓರ್ವ ಉಗ್ರನನ್ನು ಹೊಡೆದುರುಳಿಸಲಾಗಿತ್ತು.