ಹೈಲೈಟ್ಸ್:
- ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ
- ಈ ನಿಟ್ಟಿನಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಯುತ್ತಿದೆ ಸಭೆ
- ಸಭೆಯಲ್ಲಿ ಸಚಿವರಾದ ಡಾ. ಕೆ ಸುಧಾಕರ್, ಆರ್. ಅಶೋಕ್ ಭಾಗಿ
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದ್ದು, ಜನವರಿಯಿಂದ ಮಕ್ಕಳಿಗೆ ಕೊರೊನಾ ಲಸಿಕೆ ಮತ್ತು ಫ್ರಂಟ್‌ಲೈನ್ ವರ್ಕರ್ಸ್‌ಗೆ ಬೂಸ್ಟರ್ ಡೋಸ್ ನೀಡುವ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಣೆಯ ಹಿನ್ನೆಲೆಯಲ್ಲಿ ಈ ಸಭೆ ಮಹತ್ವ ಪಡೆದುಕೊಂಡಿದೆ.
ಬೆಂಗಳೂರಿನ ಒಂದೇ ಕುಟುಂಬದ ನಾಲ್ವರಲ್ಲಿ ಓಮಿಕ್ರಾನ್: ಅಪಾರ್ಟ್‌ಮೆಂಟ್ ಸೀಲ್‌ಡೌನ್
ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈವರೆಗೆ 23 ಪ್ರಕರಣಗಳು ವರದಿಯಾಗಿದೆ. ಓಮಿಕ್ರಾನ್ ವೇಗವಾಗಿ ಹರಡುವ ತಳಿಯಾಗಿದ್ದು ಈ ನಿಟ್ಟಿನಲ್ಲಿ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ನೇತೃತ್ವದ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.
ಸಭೆಯಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್, ಕಂದಾಯ ಸಚಿವ ಆರ್. ಅಶೋಕ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಬಿಬಿಎಂಪಿ ಅಧಿಕಾರಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಇನ್ನು ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನೆಲೆಯಲ್ಲಿ ಕೆಲವೊಂದು ಬಿಗಿಯಾದ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ಓಮಿಕ್ರಾನ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ನೈಟ್ ಕರ್ಫ್ಯೂ ಕುರಿತಾಗಿ ಆಲೋಚನೆಗಳು ನಡೆಯುತ್ತಿದ್ದು, ಅದರ ಅಗತ್ಯತೆಯ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ.
ಇನ್ನು ಕೋವಿಡ್ ಪ್ರಕರಣಗಳ ಸಂಖ್ಯೆ ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ಇತರ ಕಡೆಗಳಲ್ಲಿ ಮಾಸ್ಕ್ ಧರಿಸದವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಈಗಾಗಲೇ ನಗರದಲ್ಲಿ ಮಾರ್ಷಲ್‌ಗಳು ರೌಂಡ್ಸ್ ಹಾಕುತ್ತಿದ್ದು ಮಾಸ್ಕ್ ಧರಿಸದಿದ್ದಲ್ಲಿ ದಂಡ ವಸೂಲಿ ಮಾಡುತ್ತಿದ್ದಾರೆ.